ಮಧುಗಿರಿ, ಸೆ.11: ಗ್ರಾಮೀಣ ಪ್ರದೇಶಗಳಿಂದ ನಗರಕ್ಕೆ ಶಾಲಾ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ಸಮರ್ಪಕ ಕೆಎಸ್ಆರ್ಟಿಸಿ ಬಸ್ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ಎಬಿವಿಪಿ ಕಾರ್ಯಕರ್ತರು ಶುಕ್ರವಾರ ಮಧುಗಿರಿ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ಪ್ರತಿಭಟನೆ ನಡೆಸಿದರು.
ಎಬಿವಿಪಿ ತಾಲ್ಲೂಕು ಸಂಚಾಲಕ ಲೋಕೇಶ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸುಮಾರು 10ರಿಂದ 15 ಮಂದಿ ಪಾಲ್ಗೊಂಡಿದ್ದರು. ಪ್ರತಿಭಟನಾಕಾರರು ಕೆಲಕಾಲ ಕೆಎಸ್ಆರ್ಟಿಸಿ ಬಸ್ಗಳನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದರು. ಗ್ರಾಮೀಣ ಭಾಗಗಳಿಗೆ ಸಮರ್ಪಕ ಬಸ್ ಸಂಪರ್ಕವಿಲ್ಲದೆ ವಿದ್ಯಾರ್ಥಿಗಳು ಖಾಸಗಿ ವಾಹನಗಳನ್ನು ಅವಲಂಬಿಸುವಂತಾಗಿದೆ. ಬಸ್ಗಳು ನಿಗದಿತ ಸಮಯಕ್ಕೆ ಸಂಚರಿಸದಿರುವುದರಿಂದ ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ಸಮಯಕ್ಕೆ ತಲುಪಲು ತೊಂದರೆಯಾಗುತ್ತಿದೆ ಎಂದು ಆರೋಪಿಸಿದರು.
ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿರುವ ಗ್ರಾಮೀಣ ಮಾರ್ಗಗಳಲ್ಲಿ ಶಾಲಾ-ಕಾಲೇಜುಗಳ ಸಮಯಕ್ಕೆ ಅನುಗುಣವಾಗಿ ಹೆಚ್ಚುವರಿ ಬಸ್ಗಳನ್ನು ಓಡಿಸುವಂತೆ ಆಗ್ರಹಿಸಿ ಡಿಪೋ ಮ್ಯಾನೇಜರ್ ಕಿರಣ್ ಅವರಿಗೆ ಮನವಿ ಸಲ್ಲಿಸಿದರು.
ಬಸ್ ತಡೆದು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಆಗಮಿಸಿದ ಸಿಪಿಐ ಹನುಮಂತರಾಯಪ್ಪ ಹಾಗೂ ಸಬ್ಇನ್ಸ್ಪೆಕ್ಟರ್ ಚಂದ್ರಶೇಖರ್ ಪ್ರತಿಭಟನಾಕಾರರನ್ನು ಮನವೊಲಿಸಿ ಪ್ರತಿಭಟನೆಯನ್ನು ಶಾಂತಗೊಳಿಸಿದರು. ಪ್ರತಿಭಟನೆಯಲ್ಲಿ ವರಲಕ್ಷ್ಮಿ, ಲೋಕೇಶ್, ದಿವ್ಯ, ರಂಜಿತಾ, ನಂದ, ಶೃತಿ ಸೇರಿದಂತೆ ಎಬಿವಿಪಿ ಕಾರ್ಯಕರ್ತರು ಭಾಗವಹಿಸಿದ್ದರು.