ಮಧುಗಿರಿ: ತಾಲ್ಲೂಕಿನ ಪುರವರದಿಂದ ಕೊಡಿಗೇನಹಳ್ಳಿಗೆ ತೆರಳುವ ಮಾರ್ಗ ಮಧ್ಯೆ ರಸ್ತೆ ಬದಿಯಲ್ಲಿ ಗಿಡಗಂಟಿಗಳು ದಟ್ಟವಾಗಿ ಬೆಳೆದಿದ್ದು, ಸಂಬಂಧಪಟ್ಟ ಇಲಾಖೆಯಿಂದ ಸಮರ್ಪಕ ನಿರ್ವಹಣೆ ಹಾಗೂ ಸ್ವಚ್ಛತಾ ಕಾರ್ಯ ನಡೆಯುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಗಿಡಗಂಟಿಗಳು ರಸ್ತೆಯ ಬದಿಗೆ ಚಾಚಿಕೊಂಡಿರುವುದರಿಂದ ವಾಹನ ಸಂಚಾರಕ್ಕೆ ಅಡಚಣೆಯಾಗಿದ್ದು, ತಿರುವುಗಳಲ್ಲಿ ಎದುರಿನಿಂದ ಬರುವ ವಾಹನಗಳು ಕಾಣದೆ ಅಪಘಾತದ ಆತಂಕ ಎದುರಾಗಿದೆ.
ರಾತ್ರಿ ವೇಳೆ ಅಪಾಯ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದ್ದು, ದ್ವಿಚಕ್ರ ವಾಹನ ಸವಾರರು ಹಾಗೂ ಪಾದಚಾರಿಗಳು ಆತಂಕದಿಂದ ಸಂಚರಿಸುವಂತಾಗಿದೆ. ರಸ್ತೆಯ ನಿರ್ವಹಣೆಯನ್ನು ನಿಯಮಿತವಾಗಿ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿರುವುದರಿಂದಲೇ ಈ ಸಮಸ್ಯೆ ಉಂಟಾಗಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಂಬಂಧಪಟ್ಟ ಇಲಾಖೆ ಹಾಗೂ ಅಧಿಕಾರಿಗಳು ಕೂಡಲೇ ಸ್ಥಳ ಪರಿಶೀಲನೆ ನಡೆಸಿ, ರಸ್ತೆ ಬದಿಯ ಗಿಡಗಂಟಿಗಳನ್ನು ತೆರವುಗೊಳಿಸುವುದರ ಜೊತೆಗೆ ರಸ್ತೆಯ ನಿಯಮಿತ ನಿರ್ವಹಣೆಗೆ ಶಾಶ್ವತ ಕ್ರಮ ಕೈಗೊಳ್ಳಬೇಕು. ಯಾವುದೇ ಅನಾಹುತ ಸಂಭವಿಸುವ ಮುನ್ನವೇ ಅಧಿಕಾರಿಗಳು ಎಚ್ಚೆತ್ತುಕೊಂಡು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಹಾಗೂ ವಾಹನ ಸವಾರರು ಒತ್ತಾಯಿಸಿದ್ದಾರೆ.